ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್. ಚಂದ್ರಶೇಖರ್ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹುಲಿ ಹಾಲಿನ ಮೇವು, ಭಕ್ತ ಜ್ಞಾನದೇವ, ಧರ್ಮ ಯುದ್ಧ, ತಾಯಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ. ಜೊತೆಗೆ ತೆಲುಗು, ತಮಿಳು ಮತ್ತು ಬಂಗಾಲಿ ಸಿನಿಮಾಗಳನ್ನು ನಿರ್ಮಿಸಿದ್ದಾರೆ.
ಎರಡು ಬಾರಿ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಭಾರತೀಯ ಚಲನಚಿತ್ರ ಒಕ್ಕೂಟದ ಅಧ್ಯಕ್ಷರಾಗಿ ಮೂರು ಬಾರಿ ಆಯ್ಕೆ ಆಗಿದ್ದರು. ಸಹಾಯಕ ನಿರ್ಮಾಪಕರಾಗಿ ಅವರು ಮೊದಲು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಅವರ ತಂದೆ ಕೆ.ಸಿ. ನಂಜುಂಡೇಗೌಡರು ಬಬ್ರುವಾಹನ, ದಾರಿ ತಪ್ಪಿದ ಮಗ, ಸತ್ಯಹರಿಶ್ಚಂದ್ರ ಮೊದಲಾದ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿದ್ದರು.
ಸಿಎಂ ಸಂತಾಪ
ಕೆ.ಸಿ.ಎನ್. ಚಂದ್ರು ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಹಿರಿಯ ನಿರ್ಮಾಪಕ ಕೆ.ಸಿ.ಎನ್.ಚಂದ್ರುರವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಅತ್ಯುತ್ತಮ ನಿರ್ಮಾಪಕರನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.
Advertisement. Scroll to continue reading.