ಉಡುಪಿ: ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕಾರ್ಯಕ್ರಮವು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.
ಅವರು ಇಂದು, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಶ್ರೀಕೃಷ್ಣ ಮಠದ ಪರ್ಯಾಯ ಕುರಿತಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀಕೃಷಮಠದ ಪರ್ಯಾಯ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಹಿನ್ನಲೆ, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ, ವಾಹನಗಳ ಸುಗಮ ಸಂಚಾರ, ವಾಹನ ನಿಲುಗಡೆ, ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಪರ್ಯಾಯ ಕಾರ್ಯಕ್ರಮದ ಹಿನ್ನಲೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯ ಮಂತ್ರ‍್ರಿಗಳೊಂದಿಗೆ ಚರ್ಚಿಸಿ, ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಬೇಕು, ಸಾರ್ವಜನಿಕರ ಉಪಯೋಗಕ್ಕಾಗಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಮಾಡುವುದರೊಂದಿಗೆ ಅವುಗಳಿಗೆ ನೀರಿನ ವ್ಯವಸ್ಥೆ , ಸ್ವಚ್ಚತೆಗೆ ಆದ್ಯತೆ ನೀಡಬೇೆಕು ಎಂದ ಅವರು, ನಗರದ ರಸ್ತೆ ನಿರ್ಮಾಣ ಸೇರಿದಂತೆ ದುರಸ್ತಿ ಕಾರ್ಯಗಳನ್ನು ಈ ತಿಂಗಳ 10 ರೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.
ಪೊಲೀಸ್ ಇಲಾಖೆಯವರು ವಾಹನಗಳ ಸುಗಮ ಸಂಚಾರ ಸೇರಿದಂತೆ ಅವುಗಳ ನಿಲುಗಡೆಗೆ ಸೂಕ್ತ ಸ್ಥಳಗಳನ್ನು ಗುರುತಿಸುವುದರೊಂದಿಗೆ ವಾಹನ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ ರನ್ನು ನಿಯೋಜನೆಗೊಳಿಸಬೇಕು,ಆಯ್ದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಕೆ ಮಾಡಬೇಕು, ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದರು.
ಪರ್ಯಾಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಟ್ಯಾಬ್ಲೋ ಗಳನ್ನು ಇಲಾಖೆಗಳು ಸಿದ್ದಪಡಿಸುವುದರೊಂದಿಗೆ, ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದ ಅವರು ರಾಜ್ಯ ಹಾಗೂ ಹೊರರಾಜ್ಯದ ಸಾಂಸ್ಕೃತಿಕ ಕಲಾತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಿದರು.
ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತಾದಿಗಳು ಕಡ್ಡಾಯವಾಗಿ 2 ಡೋಸ್ ಕೋವಿಡ್ 19 ಲಸಿಕೆಯನ್ನು ಪಡೆದಿರಬೇಕು, ಮಾಸ್ಕ್ ಧರಿಸುವುದರೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಎಚ್ಚರವಹಿಸಬೇಕು ಎಂದರು.
ಭಕ್ತಾದಿಗಳ ಸಂಚಾರÀಕ್ಕೆ ಅನುಗುಣವಾಗಿ ಸಾರಿಗೆ ವಾಹನಗಳನ್ನು ವ್ಯವಸ್ಥೆ ಮಾಡಬೇಕೆಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ ಇಲಾಖೆವತಿಯಿಂದ ನಿಗಧಿತ ಸ್ಥಳಗಳಲ್ಲಿ ಕೋವಿಡ್ ಲಸಿಕೆಗಳನ್ನು ನೀಡಲು ಲಸಿಕಾ ಕೇಂದ್ರಗಳನ್ನು ತೆರೆಯಬೇಕು, ಹೆಚ್ಚಿನ ಕೋವಿಡ್ ತಪಾಸಣೆ ಯನ್ನು ನಡೆಸಬೇಕು, ಆಂಬುಲೆನ್ಸ್ ಸೇರಿದಂತೆ ಅಗ್ನಿ ಅವಘÀಡಗಳು ನಡೆದಲ್ಲಿ ತಕ್ಷಣ ಸ್ಪಂದಿಸಲು ಸನ್ನದ್ದರಾಗಿರಬೇಕೆಂದು ಸೂಚನೆ ನೀಡಿದರು.
ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ವಿವಿದ ದಾನಿಗಳು ಮತ್ತು ಸಂಘ ಸಂಸ್ಥೆಗಳು ನೀಡಿರುವ 11 ಆಂಬುಲೆನ್ಸ್ ಗಳ ಪೂರ್ಣ ಪ್ರಮಾಣದ ನಿರ್ವಹಣೆಯ ಜವಾಬ್ದಾರಿಯನ್ನು ಜಿಲ್ಲೆಯ ವಿವಿಧ ಕೋ ಆಪರೇಟಿವ್ ಸೊಸೈಟಿಗಳು ನಿಭಾಯಿಸಬೇಕು ಎಂಬ ಸಚಿವರ ಮನವಿಗೆ , ಸಹಕಾರಿ ಸಂಘಗಳ ಮುಖ್ಯಸ್ಥರು ಸ್ಪಂದಿಸಿದ್ದು, ಈ ಕಾರ್ಯದ ಉಸ್ತುವಾರಿಯನ್ನು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂದಕರು ವಹಿಸಿಕೊಳ್ಳುವಂತೆ ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾತ್ತಿದ್ದು, ಈ ಸಂಖ್ಯೆಯು ಎಂ.ಐ.ಟಿ. ಪರಿಸರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವುದರ ಜೊತೆಗೆ ಕಂಟೈನ್‌ಮೆಂಟ್ ಝೋನ್ ಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
14 ವರ್ಷ ಮೆಲ್ಪಟ್ಟವರಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸಬೇಕು , ಲಸಿಕೆ ನೀಡಿದ ನಂತರ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು, ಲಸಿಕೆ ನೀಡುವ ಸಂದರ್ಭದಲ್ಲಿ ಪೋಷಕರು ಹಾಜರಿರುವಂತೆ ನೋಡಿಕೊಳ್ಳಬೇಕು, ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಾರ್ಡನ್ ಗಳು ನಿಗಾ ವಹಿಸಬೇಕು ಎಂದರು.
ಸಭೆಯಲ್ಲಿ ಉಡುಪಿ ಶಾಸಕ ಹಾಗೂ ಪರ್ಯಾಯ ಸಮಿತಿ ಗೌರವಾಧ್ಯಕ್ಷ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.