ನವದೆಹಲಿ : ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ಒಂದು ಬ್ಯಾಚ್ ಅನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಕಾರ್ಯಾರಂಭದ ದಿನವಾದ ನಾಳೆ ಅರ್ಜಿಗಳ ವಿಚಾರಣೆ ನಡೆಸಲಿದೆ.
ಈ ಹಿಂದೆ ಸುಪ್ರೀಂ ಕೋರ್ಟ್‌ನ ನಿರ್ಗಮಿತ ನ್ಯಾಯಮೂರ್ತಿ ಎನ್. ವಿ. ರಮಣ ಅವರ ಪೀಠದ ಎದುರು ಹಿಜಾಬ್ ಪ್ರಕರಣದ ವಿಚಾರಣೆ ನಡೆಸುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಈವರೆಗೂ ದಿನಾಂಕ ನಿಗದಿ ಮಾಡಿರಲಿಲ್ಲ
ಶಾಲಾ ಕಾಲೇಜುಗಳ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.
ಈ ವರ್ಷದ ಜನವರಿಯಲ್ಲಿ ಉಡುಪಿಯ ಸರ್ಕಾರಿ ಪಿಯು ಕಾಲೇಜು ಹಿಜಾಬ್ ಧರಿಸಿದ ಆರು ಬಾಲಕಿಯರನ್ನು ಪ್ರವೇಶಿಸದಂತೆ ನಿರ್ಬಂಧಿಸಿದಾಗ ಹಿಜಾಬ್ ವಿವಾದ ಭುಗಿಲೆದ್ದಿತ್ತು. ಇದರ ನಂತರ, ಬಾಲಕಿಯರು ಪ್ರವೇಶ ನಿರಾಕರಿಸಿದ್ದಕ್ಕಾಗಿ ಕಾಲೇಜಿನ ಹೊರಗೆ ಪ್ರತಿಭಟಿಸಿದ್ದರು. ಬಳಿಕ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹಬ್ಬಿತ್ತು.