ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಮೇಲೆ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಪೋರ್ಟಲ್ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೊಬ್ಬ ವ್ಯಕ್ತಿ ಅಮಿತ್ ಚಕ್ರವರ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಸೆಲ್‌ನಲ್ಲಿ ದಾಖಲಾಗಿರುವ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ-ಎನ್ ಸಿಆರ್ ನ 37ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಲವಾರು ಪತ್ರಕರ್ತರ ಮನೆಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿದೆ. ಅಲ್ಲದೇ, ಫೋನ್ ಮತ್ತು ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಪ್ರಕರಣ ಸಂಬಂಧ ಇದುವರೆಗೆ ಇಬ್ಬರು ಆರೋಪಿಗಳಾದ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಒಟ್ಟು 37 ಪುರುಷರು, 9 ಮಹಿಳಾ ಶಂಕಿತರನ್ನು ಅವರ ಮನೆಗಳಲ್ಲಿ ವಿಚಾರಣೆ ನಡೆಸಲಾಗಿದೆ ಮತ್ತು ಡಿಜಿಟಲ್ ಸಾಧನಗಳು, ದಾಖಲೆಗಳು ಮತ್ತಿತರ ವಸ್ತುಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.