ಉಡುಪಿ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರ ತಂಡ ವಿಚಾರಣೆ ನಡೆಸುತ್ತಿದೆ. ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಬುಧವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಂಕಿತ ಆರೋಪಿ ಪ್ರವೀಣ್ ಚೌಗಲೆ ಎಂಬಾತನನ್ನು ತಾಂತ್ರಿಕ ಸಾಕ್ಷ್ಯ ಮತ್ತು ಗುಪ್ತಚರ ವರದಿಗಳ ಆಧಾರದ ಮೇಲೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸದ್ಯ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಹಲವಾರು ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಪ್ರಕರಣವನ್ನು ಹಲವು ದೃಷ್ಟಿಕೋನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಶಂಕಿತರೆಲ್ಲರನ್ನೂ ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಸ್ಪಿ, ಡಿವೈಎಸ್ಪಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಚೌಗಲೆ ಅವರನ್ನು ಈ ಹಿಂದೆ ಉಡುಪಿ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿ ಉಡುಪಿಗೆ ಕರೆತಂದಿದ್ದರು.
ನವೆಂಬರ್ 12ರಂದು ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ 3 ಮಕ್ಕಳನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.