ಕಲಬುರಗಿ: ಅಫಜಲಪುರ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಆಕಸ್ಮಿಕವಾಗಿ ಬಿಸಿಯಾದ ಸಾಂಬಾರ್ ಪಾತ್ರೆಯಲ್ಲಿ ಬಿದ್ದಿದ್ದ 2ನೇ ತರಗತಿ ವಿದ್ಯಾರ್ಥಿನಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ನವೆಂಬರ್ 16 ರಂದು ಶಾಲೆಗೆ ಹೊಂದಿಕೊಂಡಿರುವ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಕೋಣೆಯಲ್ಲಿ ದುರಂತ ನಡೆದಿದೆ. ಏಳು ವರ್ಷದ ಮಹಾಂತಮ್ಮ ಶಿವಪ್ಪ ತಳವಾರ ತೀವ್ರವಾಗಿ ಗಾಯಗೊಂಡಿದ್ದಳು.
ಘಟನೆ ನಂತರ ಶಾಲೆಯ ಇಬ್ಬರು ಸಿಬ್ಬಂದಿ ಮತ್ತು ಮಧ್ಯಾಹ್ನದ ಬಿಸಿಯೂಟದ ಮುಖ್ಯ ಅಡುಗೆಯವರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗುವಿಗೆ ಶೇ 40ರಷ್ಟು ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಚೌಡಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲೆಯ ಇನ್ನೊಂದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಕೆಯ ಸ್ಥಿತಿ ಹದಗೆಟ್ಟಿದ್ದರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಆಕೆ ಭಾನುವಾರ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ ಅಡಿಯಲ್ಲಿ ನಿರ್ಲಕ್ಷ್ಯದಿಂದ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅವರು ಹೇಳಿದರು.
