ಉಡುಪಿ : ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆಯ ನ್ಯಾಯಾಂಗ ಬಂಧನ ಅವಧಿ 14 ದಿನಗಳವರೆ ವಿಸ್ತರಿಸಿ ಆದೇಶಿಸಲಾಗಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ನ.22ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಡಿ.5ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದ ಹಾಜರುಪಡಿಸಲಾಯಿತು.
ಡಿ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.
ಮಂಗಳೂರು ಇಂಡಿಯಾ ಎಕ್ಸ್ಪ್ರೆಸ್ ಉದ್ಯೋಗಿಯಾಗಿದ್ದ ಪ್ರವೀಣ್ ಚೌಗುಲೆ ನ.12ರಂದು ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದನು. ತನಿಖೆ ನಡೆಸಿದ ಪೊಲೀಸರು ನ.14ರಂದು ಬೆಳಗಾವಿಯಲ್ಲಿ ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.