ಚಂದನವನ : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(86) ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಲೀಲಾವತಿ ಅವರು ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಕರಾವಳಿ ಮೂಲದವರಾದ ಲೀಲಾವತಿ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದರು. ಲೀಲಾವತಿ ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಅವರು, ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜ್‌ಕುಮಾರ್, ವಿಷ್ಣುವರ್ಧನ್ ಮೊದಲಾದವರ ಜೊತೆ ನಟಿಸಿದ್ದಾರೆ. ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕವೂ ಲೀಲಾವತಿ ಗುರುತಿಸಿಕೊಂಡಿದ್ದರು.
ಕೆಲಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.
ರಂಗಭೂಮಿ ಕಲಾವಿದೆ :
ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು.
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ.
ರಾಜ್ ಕುಮಾರ್ ಜೊತೆ ಹಲವು ಚಿತ್ರ – ಜನಪ್ರಿಯ ಜೋಡಿ
ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ನಂದಾದೀಪ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳಲ್ಲಿ ನಟಿಸಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.
ಕೃಷಿ ಚಟುವಟಿಕೆ :
ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟರಾಗಿದ್ದಾರೆ. ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಲೀಲಾವತಿ ಅವರ ಕನಸಿನ ಪಶು ಆಸ್ಪತ್ರೆಯನ್ನು ಡಿಸಿಎಂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿದ್ದರು.
ಪ್ರಶಸ್ತಿ :
ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಗಿತ್ತು.