ನವದೆಹಲಿ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ನಾಳೆಯೊಳಗೆ ತೆಗೆದು ಹಾಕುವಂತೆ ಸುಪ್ರೀಂ ಕೋರ್ಟ್ ಗುರುವಾರ ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಸೂಚಿಸಿದೆ.
ಎಲ್ಲಾ ಪೋಸ್ಟ್ ಗಳನ್ನು ತೆಗೆದು ಹಾಕಲಿ ಸಾಧ್ಯವಾಗದಿದ್ದರೆ, ರೋಹಿಣಿ ಸಿಂಧೂರಿ ವಿರುದ್ಧದ ಎಲ್ಲಾ ಕಾಮೆಂಟ್‌ಗಳನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ ಎಂದು ಕನಿಷ್ಠ ಪೋಸ್ಟ್ ಹಾಕಬೇಕು ಎಂದು ನ್ಯಾಯಾಲಯ ಹೇಳಿದೆ.
ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠ ಈ ಮೌಖಿಕ ನಿರ್ದೇಶನ ನೀಡಿದೆ.
ಮಧ್ಯಸ್ಥಿಕೆ ವಿಫಲ :
2023ರ ಫೆಬ್ರವರಿಯಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಇದರಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತನ್ನ ವ್ಯಕ್ತಿತ್ವಕ್ಕೆ ರೂಪಾ ಧಕ್ಕೆ ತಂದಿದ್ದಾರೆ. ಕೆಲವು ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ಕೂಡ ನೀಡಿದ್ದಾರೆ. ನನ್ನ ವೈಯಕ್ತಿಕ ತೇಜೋವಧೆ ಮಾಡಲಾಗಿದೆ ಎಂದು ನ್ಯಾಯಾಲಯದಲ್ಲಿ ಧಾವೆ ಹೂಡಿದ್ದರು. ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲು ಮಾಡಿರುವ ರೋಹಿಣಿ ಸಿಂಧೂರಿ, ರೂಪಾ ವಿರುದ್ಧ 1 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ನಿನ್ನೆ ಸುಪ್ರೀಂ ಕೋರ್ಟ್ ಇಬ್ಬರೂ ಅಧಿಕಾರಿಗಳು ತಮ್ಮ ವಿವಾದಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳುವಂತೆ ಸೂಚಿಸಿತ್ತು. ಆದರೆ ಇಂದು ಮಧ್ಯಸ್ಥಿಕೆ ವಿಫಲವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಇಬ್ಬರೂ ಅಧಿಕಾರಿಗಳು ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು.