ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ.
ಅರ್ಜಿದಾರರ ಪರ ವಕೀಲರು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದ್ದು, ಈ ಎಲ್ಲಾ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೋರಿದರು. ಇದಕ್ಕೆ ಒಪ್ಪಿಗೆ ನೀಡಿದ ಹೈಕೋರ್ಟ್, ಜನವರಿ 5 ರಂದು ವಿಸ್ತೃತವಾದ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಆದಾಯ ತೆರಿಗೆ ಇಲಾಖೆ ದಾಳಿಗಳು ಮತ್ತು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದ ಮೇಲೆ, ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು ಮತ್ತು ಅದಕ್ಕೆ ಅಂದಿನ ಬಿಜೆಪಿ ಸರ್ಕಾರ ಸೆಪ್ಟೆಂಬರ್ 25, 2019 ರಂದು ಅನುಮತಿ ನೀಡಿತ್ತು.
ಸರ್ಕಾರ ಬದಲಾದ ನಂತರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28, 2023 ರಂದು ಹಿಂತೆಗೆದುಕೊಳ್ಳಲಾಗಿದೆ.