ಬೆಂಗಳೂರು : ರಾಜ್ಯದಲ್ಲಿ ಸೊಮವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಒಬ್ಬರು ಮೃತಪಟ್ಟಿದ್ದರೆ, 296 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ 296 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಪಾಸಿಟಿವ್ ಪ್ರಮಾಣ ಶೇ. 5.89 ರಷ್ಟು ಇದೆ. ಬೆಂಗಳೂರಿನಲ್ಲಿ 131 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ ಚೇತರಿಸಿಕೊಂಡು 50 ಮಂದಿ ಡಿಸ್ಚಾರ್ಜ್ ಆಗಿದ್ದು, ಸೋಂಕಿತರಲ್ಲಿ 1,179 ಮಂದಿ ಮನೆ ಆರೈಕೆಗೆ ಒಳಗಾದರೆ, 66 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 20 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೊರೋನಾ ಸೋಂಕಿತ 55 ವರ್ಷದ ವ್ಯಕ್ತಿ ಲಸಿಕೆ ಪಡೆದಿದ್ದರೂ ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದಾರೆ. ಅವರು ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಇಲಾಖೆ ತಿಳಿಸಿದೆ.