ಬೆಂಗಳೂರು : ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದು ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (48) ಲಿಂಗೈಕ್ಯರಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹಿರೇಮಠದ ವೀರ ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತವಾಗಿದೆ.
ಸ್ವಾಮೀಜಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಫೆಬ್ರವರಿ 25ರಂದು ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ತಮ್ಮ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಬಿ.ವೈ ವಿಜಯೇಂದ್ರ ಮತ್ತು ಇತರೆ ಗಣ್ಯರಿಗೆ ಆಹ್ವಾನ ನೀಡುವ ಸಲುವಾಗಿ ಸ್ವಾಮೀಜಿ ಬೆಂಗಳೂರಿಗೆ ಆಗಮಿಸಿದ್ದರು.
ಬೆಂಗಳೂರಿನ ಭೇಟಿ ಮುಗಿಸಿ ಯಾದಗಿರಿಗೆ ವಾಪಸ್ ಆಗುವ ಸಮಯದಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ನಿನ್ನೆ ಆಗಮಿಸಿದ್ದರು. ರೈಲ್ವೆ ನಿಲ್ದಾಣದಲ್ಲಿ ನಡೆದಾಡಿಕೊಂಡು ಹೋಗುವ ಸಮಯದಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು.
ಅವರ ಜೊತೆಗಿದ್ದ ಭಕ್ತರು ಅವರನ್ನು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಂತೆ, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಹಿರೇಮಠದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.

