ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಫೆ.13, 14 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಷ್ಟೇ ಅಲ್ಲದೇ, ಅಬುಧಾಬಿಯಲ್ಲಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ.
2015 ರಿಂದ ಯುಎಇಗೆ ಪ್ರಧಾನಿ ಮೋದಿ ಅವರ ಏಳನೇ ಭೇಟಿ ಇದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.
ಮೋದಿ ಮತ್ತು ಅಲ್ ನಹ್ಯಾನ್ ಅವರು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸುವ ಮತ್ತು ವಿಸ್ತರಿಸುವ ಮಾರ್ಗಗಳನ್ನು ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರದ ಶೃಂಗಸಭೆ 2024 ರಲ್ಲಿ ಗೌರವ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಶೃಂಗಸಭೆಯಲ್ಲಿ ವಿಶೇಷ ಭಾಷಣವನ್ನು ಮಾಡುತ್ತಾರೆ ಎಂದು MEA ತಿಳಿಸಿದೆ.
ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ BAPS ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಎಂಇಎ ಹೇಳಿದೆ.