ಬೆಂಗಳೂರು : 5 ಮತ್ತು 8 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. 10 ದಿನದ ಬಳಿಕ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಮೂಲಕ ಸರ್ಕಾರದ ಆದೆಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲಾಗಿದೆ. ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ. ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟ ಮಾಡುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ವಿಚಾರಣೆ ಇಂದಿಗೆ ಮುಂದೂಡಿತ್ತು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿ, ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ಇಂದಿಗೆ ಮುಂದೂಡಿತ್ತು. ಅಂತೆಯೇ ಇಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ನಡೆದಿದೆ.

