ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎಲ್ಲೆಲ್ಲಿ ಮಳೆ ?

ಮಾರ್ಚ್ 17 ರಿಂದ 18 ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಯ ಕೆಲವಡೆ ಮಳೆಯಾಗುವ ಸಾಧ್ಯತೆ ಇದೆ.
ಮಾರ್ಚ್ 17 ರಿಂದ 18 ರವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆ ರಾಜ್ಯದ ನಿಪ್ಪಾಣಿ, ರಾಯಭಾಗ, ಸಕಲೇಶಪುರ ಸೇರಿದಂತೆ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಬಾಗಲಕೋಟೆ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.
ಕರಾವಳಿ ಮತ್ತು ಇತರ ಪ್ರದೇಶಗಳಲ್ಲಿ ತಾಪಮಾನ ಹೆಚ್ಚು ಅಗಲಿದೆ. ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿವೆ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

