ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು : ಜಲಜೀವನ್ ಮಿಷನ್ ಯೋಜನೆಯಡಿ 396 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಮನೆ-ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.
ಆರ್ ಐ ಡಿ ಎಫ್ ಅಡಿಯಲ್ಲಿ ನಬಾರ್ಡ್ ಸಾಲದ ನೆರವಿನಿಂದ ಬೈಂದೂರು ವಿಧಾನಸಭಾ ಕ್ಷೇತ್ರದ 788 ಗ್ರಾಮೀಣ ಜನವಸತಿ ಮತ್ತು ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದ್ದು, ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಟೆಂಡರ್ ಪ್ರಕ್ರಿಯೆಯ ಬಳಿಕ ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದಿದ್ದಾರೆ,
ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಹಾಗೂ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಿದ್ದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಸಂಸದರು ತಿಳಿಸಿದ್ದಾರೆ.

