ಕಾಪು: ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಿದ್ದು, ಅದರಲ್ಲಿ ಕಾಪು ತಾಲೂಕಿನ ಒಂದು ಅಥವಾ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಇದೇ ವರ್ಷದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಭರವಸೆ ನೀಡಿದರು.
ಅವರು ಬುಧವಾರ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಇವರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ
ಕೊಡಲ್ಪಡುವ ಮೂರು ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿ ಬಳಿಕ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಾಲಾಜಿ ಆರ್. ಮೆಂಡನ್,ಕಾಪುವಿನಲ್ಲಿ 100 ಬೆಡ್ ನ ತಾಲೂಕು ಆಸ್ಪತ್ರೆ, ಲಸಿಕೆ ಕೊರತೆಯನ್ನು ನೀಗಿಸುವಂತೆ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ಆಧಾರಿತ ವೈದ್ಯಾಧಿಕಾರಿ ಯನ್ನು ಪೂರ್ಣಕಾಲಿಕ ವೈದ್ಯರನ್ನಾಗಿ ನಿಯೋಜಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,
ಆರೋಗ್ಯ ಇಲಾಖೆಯ ನಿರ್ದೇಶಕ ಡಾ. ಓಂ ಪ್ರಕಾಶ್ ಪಾಟೀಲ್, ವಿಶೇಷ ಅಧಿಕಾರಿ ಶ್ರೀನಿವಾಸ್, ಡಿಎಚ್ಒ ನಾಗಭೂಷಣ್ ಉಡುಪ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ಮೊದಲಾದವರು ಉಪಸ್ಥಿತರಿದ್ದರು.